ಪರ್ವತದ ಧರ್ಮೋಪದೇಶ

ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ

 ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.2 ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ,3 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.4 ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.5 ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.6 ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.7 ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.8 ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.9 ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.10 ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.11 “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.12 ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.14 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.15 ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.16 ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.17 “ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.18 ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.19 ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.20 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.21 “‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.22 ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.23 ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,24 ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.25 “ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.26 ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.27 “‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.28 ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.29 ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.30 ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.31 ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.32 ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.33 “ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.34 ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.35 ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ; ಅದು ಆ ಮಹಾ ರಾಜನ ಪಟ್ಟಣವಾಗಿದೆ.36 ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.37 ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.38 “‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ.39 ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.40 ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.41 ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.42 ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.43 “‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.44 ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.46 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.47 ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.48 ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.

ಮ್ಯಾಥ್ಯೂ 5

ದಾನಧರ್ಮದ ವಿಧಾನ

 “ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.2 “ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.3 ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.4 ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.ಪ್ರಾರ್ಥನೆಯ ವಿಧಾನ5 “ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.6 ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.7 ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.8 ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.9 ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,10 “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.12 ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.13 ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು14 ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.15 ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.16 “ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.17 ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ.18 ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.ಶಾಶ್ವತ ಸಂಪತ್ತು19 “ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.20 ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,21 ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.22 “ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!24 “ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.ನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿ25 “ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?27 ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;29 ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.30 ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!31 ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.32 ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.33 ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.34 ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.

ಮ್ಯಾಥ್ಯೂ 6

ಇತರರ ಬಗ್ಗೆ ನ್ಯಾಯತೀರ್ಪು ಮಾಡಬೇಡಿ

 “ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.2 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.3 “ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?4 ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.5 ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.6 “ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.ಫಲದಾಯಕ ಪ್ರಾರ್ಥನೆ7 “ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;8 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.9 “ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?10 ಮೀನು ಕೇಳಿದರೆ ಹಾವನ್ನು ಕೊಡುವನೋ?11 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?12 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.ವಿನಾಶದ ಬಾಗಿಲು ವಿಶಾಲ13 “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.14 ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.ಸುಳ್ಳು ಪ್ರವಾದಿಗಳಿದ್ದಾರೆ ಎಚ್ಚರಿಕೆ15 “ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.16 ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?17 ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;18 ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.19 ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.20 ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.ಕಪಟಿಗಳಿಗೆ ದೊರೆಯುವ ತೀರ್ಪು21 “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.22 ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.23 ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.ಸ್ಥಿರವಾದ ಮನೆ24 “ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.25 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.26 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.27 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.28 “ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.29 ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.

ಮ್ಯಾಥ್ಯೂ 7